ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಆಗಸ್ಟ್ 23ರವರೆಗೆ ಕೇಜ್ರಿವಾಲ್ ಜೈಲುವಾಸ ಮುಂದುವರಿಯಲಿದೆ.
ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಮನವಿಯನ್ನು ಸೋಮವಾರ ಪರಿಗಣಿಸಿದ್ದ ಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತ್ತು.
ದೆಹಲಿ ಹೈಕೋರ್ಟ್ ಆಗಸ್ಟ್ 5ರಂದು ಕೇಜ್ರಿವಾಲ್ ಅವರ ಬಂಧನವನ್ನು ಕಾನೂನುಬದ್ಧ ಎಂದು ಹೇಳಿತ್ತು. ಅಲ್ಲದೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಸಿಬಿಐ ಪ್ರಕರಣದಲ್ಲಿ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.