2023ರ ವಿಧಾನಸಭಾ ಚುನಾವಣೆ; ಜೆಡಿಎಸ್ ನಿಂದ ಅಭ್ಯರ್ಥಿ ಘೋಷಣೆ
ಶುಕ್ರವಾರ, 3 ಸೆಪ್ಟಂಬರ್ 2021 (12:40 IST)
ಚಿಕ್ಕಬಳ್ಳಾಪುರ : ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಬಾಗೇಪಲ್ಲಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ನಡೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದೆ ಎಂಬ ಚರ್ಚೆಗೆ ಕಾರಣವಾಗಿದೆ.
2023ರ ವಿಧಾನಸಭಾ ಚುನಾವಣೆಗೆ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಪ್ರಭಾವಿ ನಾಯಕ ಡಿ.ಜೆ.ನಾಗರಾಜ್ ರೆಡ್ಡಿ ಹೆಸರನ್ನು ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರ ಎದುರು ಘೋಷಿಸಿದ್ದಾರೆ.
ಇತ್ತೀಚೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯವರನ್ನು ಜೆಡಿಎಸ್ ಮುಖಂಡರೊಂದಿಗೆ ಭೇಟಿಯಾದ ಸಂದರ್ಭದಲ್ಲಿ ನಾಗರಾಜ್ ರೆಡ್ಡಿಯೇ ಮುಂದಿನ ಚುನಾವಣೆ ಅಭ್ಯರ್ಥಿ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಾಜ್ ರೆಡ್ಡಿ, ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ನಾನು ಶಾಸಕನಾಗಿ ಆಯ್ಕೆಯಾಗುವುದು ಖಚಿತ ಎಂದು ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಗರಾಜ್ ರೆಡ್ಡಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಮೂಲಕ ಪಕ್ಷದ ಅಧಿಕೃತ ಅಭ್ಯರ್ಥಿ ಸಿ.ಆರ್.ಮನೋಹರ್ ಸೋಲಿಗೆ ಕಾರಣರಾಗಿದ್ದರು.