ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ಮೊದಲ ಪಟ್ಟಿ ಮತ್ತು ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಿದೆ.
ಬಿಜೆಪಿ ಇದುವರೆಗೆ ತನ್ನ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ಅದಾದ ಬಳಿಕ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ‍್ಯತೆಯಿದೆ.
ಇತ್ತ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಿಇಸಿ ಸಭೆ ನಡೆಯಲಿದೆ. ಇಂದು ಸಂಜೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ರಾಜ್ಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್ ನಾಯಕ ಎಚ್ ಡಿ ಕುಮಾರ್ ಸ್ವಾಮಿ ಕೂಡಾ ಇಂದು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು? ಯಾರಿಗೆ ನಿರಾಸೆಯಾಗಬಹುದು ಎಂಬ ಕುತೂಹಲ ಗರಿಗೆದರಿದೆ. ಎಲ್ಲಾ ಸರಿ ಹೋಗಿದ್ದರೆ ನಿನ್ನೆಯೇ ಸಭೆ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೆ ಹೋಗಿತ್ತು. ಹೀಗಾಗಿ ಇಂದು ಮಹತ್ವದ ನಿರ್ಧಾರ ಹೊರಬೀಳಲಿದೆ.