ದೆಹಲಿ, ಬಿಹಾರ್ ಸೋಲಿನಿಂದ ಬಿಜೆಪಿ ಜನಪ್ರಿಯತೆ ತೀರಾ ಕಡಿಮೆಯಾಗಿಲ್ಲ: ಅಮಿತ್ ಶಾ

ಗುರುವಾರ, 28 ಜನವರಿ 2016 (16:42 IST)
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಅಮಿತ್ ಶಾ, ದೆಹಲಿ, ಬಿಹಾರ್‌ನಲ್ಲಿ ಬಿಜೆಪಿ ಸೋಲನುಭವಿಸಿದ್ದರೂ ಜನಪ್ರಿಯತೆ ತೀರಾ ಕಡಿಮೆಯಾಗಿಲ್ಲ ಎಂದು ಹೇಳಿದ್ದಾರೆ.
 
ಮುಂಬರುವ ಕೆಲ ತಿಂಗಳುಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆಗೆ ನಡೆಯಲಿರುವ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸುವುದಾಗಿ ಪಕ್ಷವನ್ನು ಆಯಾ ರಾಜ್ಯಗಳಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. 
 
51 ವರ್ಷ ವಯಸ್ಸಿನ ಅಮಿತ್ ಶಾ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾದ ನಂತರ ಕೋಲ್ಕತಾಗೆ ಭೇಟಿ ನೀಡಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರ ಚಿಟ್ ಫಂಡ್‌ಗಳಲ್ಲಿ ಭಾರಿ ಭ್ರಷ್ಟಾಚಾರ ನಡಸಿದ್ದು, ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಅವರ ಜನಪ್ರಿಯತೆಯನ್ನು ದೇಶದ ಮೂಲೆ ಮೂಲೆಗೂ ತಲುಪಿಸುವುದು ನನ್ನ ಮೊದಲ ಆದ್ಯ ಕರ್ತವ್ಯವಾಗಿದೆ ಎಂದರು. 
 
ಪ್ರಧಾನಿ ಮೋದಿ ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದ್ದವರಾಗಿದ್ದರಿಂದ ಅವರ ಜನಪ್ರಿಯತೆ ಪಕ್ಷಕ್ಕೆ ಲಾಭ ತಂದುಕೊಡಲಿದೆ. ಬಿಜೆಪಿಯನ್ನು ಮತ್ತಷ್ಟು ಬಲಪಡಿಸಿ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ