ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕಾರಣ: ಎನ್‌ಎಸ್‌ಯುಐನಿಂದ ಪ್ರತಿಭಟನೆ

ಶುಕ್ರವಾರ, 23 ಸೆಪ್ಟಂಬರ್ 2016 (12:44 IST)
ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕ ಶಿವಮೊಗ್ಗದ ವಿನೋಬ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 
 
ಎಲ್ಲ ಪಕ್ಷಗಳು ಒಗ್ಗೂಡಿ ಹೋರಾಡಬೇಕಾದ ಸಂದರ್ಭದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೊನ್ನೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಕೂಡ ಪಾಲ್ಗೊಳ್ಳದ ಬಿಜೆಪಿ ಇಂತಹ ಸಂಕಷ್ಟದ ಸಮಯದಲ್ಲಿ ಕೂಡ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾ ನಿರತರು ಬಿಜೆಪ ಮತ್ತು ಯಡಿಯೂರಪ್ಪನವರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸುವ ತಾಕತ್ ಇಲ್ಲ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಪರ ವಕೀಲ ನಾರಿಮನ್ ಅವರನ್ನು ಬದಲಾಯಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಆದರೆ, ರಾಜ್ಯ ಸರಕಾರ ಅವರನ್ನು ಬದಲಾಯಿಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸಿದ್ದರು.
 
ನೆಲ, ಜಲದ ವಿಷಯದಲ್ಲಿ ನಮ್ಮ ಅಭಿಪ್ರಾಯ ಕೇಳುತ್ತಾರೆ. ಆದರೆ, ನಮ್ಮ ಆಗ್ರಹವನ್ನು ಪ್ರಾಮಾಣಿಕವಾಗಿ ಜಾರಿಗೆ ತರಲು ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಇಂದು ನಡೆಯುವ ಸರ್ವಪಕ್ಷ ಸಭೆ ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದರು.
 
ಬಿಜೆಪಿಯ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ "ಮೋದಿ ಮೋಸ" ಎನ್ನುವ ಹೆಸರಿನ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಬಿಜೆಪಿ ನಾಯಕರು ಹಾಗೂ ಪ್ರಧಾನಿ ಮೋದಿ ವಿರುದ್ಧ ಯುವ ಸಮೂಹ ಸಮರ ಸಾರಿತ್ತು. ಕಾವೇರಿ ವಿಷಯದಲ್ಲಿ ಬಿಜೆಪಿ ನಾಯಕರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಳೆದೆರಡು ದಿನಗಳಿಂದ ಭಾರಿ ಚರ್ಚೆ ನಡೆಯುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ