ಸಿಎಂ ಅಭ್ಯರ್ಥಿ ಘೋಷಸಬೇಕೋ, ಬೇಡವೋ: ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್

ಗುರುವಾರ, 5 ಜನವರಿ 2017 (13:46 IST)
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಿಸಬೇಕೋ ಅಥವಾ ಬೇಡವೋ, ಪ್ರಧಾನಿ ಮೋದಿಯವರ ವರ್ಚಸ್ಸು ಮುಂದಿಟ್ಟುಕೊಂಡು ಚುನಾವಣೆ ಎದುರಿಸಬೇಕೋ ಎನ್ನುವ ಗೊಂದಲ ಬಿಜೆಪಿ ಹೈಕಮಾಂಡ್‌ನ್ನು ಕಾಡುತ್ತಿದೆ. 
 
ರವಿವಾರದಂದು ನಡೆಯಲಿರುವ ಬಿಜೆಪಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ವಿಧಾನಸಭೆ ಚುನಾವಣೆಗಳಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕೋ ಅಥವಾ ಬೇಡವೋ ಎನ್ನುವ ಕುರಿತಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
 
ನವದೆಹಲಿಯಲ್ಲಿ ಶುಕ್ರವಾರದಿಂದ ಎರಡು ದಿನಗಳ ಕಾಲ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆ ಸೇರಲಿದ್ದು, ಪಂಚರಾಜ್ಯಗಳ ಚುನಾವಣೆ ರಣತಂತ್ರ ರೂಪಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ದೆಹಲಿ ಮತ್ತು ಬಿಹಾರ್ ರಾಜ್ಯದಲ್ಲಿ ಬಿಜೆಪಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದ್ದರಿಂದ ಹೀನಾಯ ಸೋಲನುಭವಿಸಿತ್ತು.ಆದರೆ, ಆಸ್ಸಾಂ ರಾಜ್ಯದಲ್ಲಿ ಸರ್ಬನಂದಾ ಸೋನೋವಾಲ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದಿತ್ತು.
 
ಉತ್ತರಪ್ರದೇಶ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರಕಾರದ ಅಡಳಿತವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ. ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಸ್ಪರ್ಧೆಯೊಡ್ಡಲು ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ಬಿಜೆಪಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಹಲವಾರು ಚುನಾವಣೆಗಳಲ್ಲಿ ಜಯಗಳಿಸಿದೆ.ಅದರಂತೆ, ಉತ್ತರಾಖಂಡ ರಾಜ್ಯದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಎಂದು ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ