ಬಿಜೆಪಿ ಮೀಸಲಾತಿಯನ್ನು ಬೆಂಬಲಿಸುತ್ತದೆ, ಲಾಲು ಸುಳ್ಳಿನ ಸರದಾರ: ಅಮಿತ್ ಶಾ

ಬುಧವಾರ, 30 ಸೆಪ್ಟಂಬರ್ 2015 (17:34 IST)
ಬಡವರಿಗೆ, ಹಿಂದುಳಿದವರಿಗೆ ನೀಡುವ ಮೀಸಲಾತಿಯನ್ನು ಬಿಜೆಪಿ ಪಕ್ಷ ಬೆಂಬಲಿಸುತ್ತದೆ. ಬಿಹಾರ್ ಸಿಎಂ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
 
ಬಿಹಾರ್ ಚುನಾವಣೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳಿಂದಾಗಿ ವಾಸ್ತವ ಸಮಸ್ಯೆಗಳನ್ನು ಮರೆಮಾಚಲು ಬಿಹಾರ್ ಸಿಎಂ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮೀಸಲಾತಿ ವಿಷಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಲಾಲು , ನಿತೀಶ್ ಪ್ರಯತ್ನಿಸುತ್ತಿದ್ದಾರೆ. ಸಂವಿಧಾನ ಜಾರಿಗೆ ಬಂದಾಗಿನಿಂದ ಮೀಸಲಾತಿಯನ್ನು ಬಿಜೆಪಿ ಬೆಂಬಲಿಸುತ್ತಾ ಬಂದಿದೆ. ಆದರೆ, ಲಾಲು ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಒಂದು ವೇಳೆ ಬಿಹಾರ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಮೀಸಲಾತಿಯನ್ನು ಅಂತ್ಯಗೊಳಿಸುತ್ತದೆ ಎಂದು ಹೇಳಿಕೆ ನೀಡಿ ಲಾಲು ಯಾದವ್ ಮತ್ತು ನಿತೀಶ್ ಕುಮಾರ್ ಯಾದವ್ ಜನತೆಯನ್ನು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಆದರೆ, ಮತದಾರರೆ ನೀವು ಅವರ ಮಾತುಗಳನ್ನು ನಂಬಬೇಡಿ. ಬಿಜೆಪಿ ಮೀಸಲಾತಿಯನ್ನು ಬೆಂಬಲಿಸುತ್ತದೆ. ಮೀಸಲಾತಿಯನ್ನು ಬದಲಾಯಿಸುವ ಉದ್ದೇಶ ಬಿಜೆಪಿ ಪಕ್ಷಕ್ಕಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.  

ವೆಬ್ದುನಿಯಾವನ್ನು ಓದಿ