ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಘೋಷಿಸಿ: ಪ್ರಧಾನಿಗೆ ವಿಎಚ್‌ಪಿ ಮನವಿ

ಬುಧವಾರ, 2 ಸೆಪ್ಟಂಬರ್ 2015 (15:39 IST)
ಇಂದಿನಿಂದ ಮೂರು ದಿನಗಳ ಕಾಲ ಆರೆಸ್ಸೆಸ್ ಮತ್ತು ಬಿಜೆಪಿ ಸಂಘಟನಾ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಖಚಿತ ನಿಲುವು ಸ್ಪಷ್ಟಪಡಿಸಬೇಕು ಎಂದು ವಿಶ್ವ ಹಿಂದು ಪರಿಷತ್ ಒತ್ತಾಯಿಸಿದೆ.
 
ಮಾಧ್ಯಮ ವರದಿಗಳ ಪ್ರಕಾರ, ರಾಮ ಮಂದಿರ ನಿರ್ಮಾಣ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಸರಕಾರದ ನಿಲುವನ್ನು ಘೋಷಿಸಬೇಕು ಎಂದು ವಿಎಚ್‌ಪಿ ಕೋರಿದೆ.
 
ಮೋದಿ ಸರಕಾರದ ಒಂದು ವರ್ಷ ಅವಧಿಯ ಕಾರ್ಯನಿರ್ವಹಣೆ ಮತ್ತು ಎದುರಾಗಿರುವ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಆರೆಸ್ಸೆಸ್ ಮತ್ತು ಬಿಜೆಪಿಯ ಉನ್ನತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಂಪುಟದ ಕೆಲ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದು ಒನ್ ರ್ಯಾಂಕ್ ಒನ್ ಪೆನ್ಶನ್ ಮತ್ತು ಧರ್ಮ ಆಧಾರಿತ ಜನಗಣತಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮೂರು ದಿನಗಳ ಕಾಲ ನಡೆಯುವ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಬಿಹಾರ್ ವಿಧಾನಸಭೆ ಚುನಾವಣೆ, ಗುಜರಾತ್‌ನಲ್ಲಿ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಕುರಿತಂತೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
 
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಿರಿಯ ಘಟಾನುಘಟಿ ನಾಯಕರು ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ನೇತೃತ್ವದ ಸರಕಾರಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ