ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪ್ರಿಯತೆಯಿಂದ ಕಾಂಗ್ರೆಸ್ ಕಂಗಾಲಾಗಿದೆ: ರವಿಶಂಕರ್ ಪ್ರಸಾದ್

ಮಂಗಳವಾರ, 4 ಆಗಸ್ಟ್ 2015 (15:53 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲವಾದ್ದರಿಂದ ಕುಂಟು ನೆಪ ಹೇಳಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಟೆಲಿಕಾಂ ಖಾತೆ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ. 
 
ಲಲಿತ್‌ಗೇಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಂಸತ್ತಿನಲ್ಲಿ ಹೇಳಿಕೆ ನೀಡಲು ಸಿದ್ದರಿದ್ದಾರೆ. ಒಂದು ವೇಳೆ ಸೋನಿಯಾ ಮತ್ತು ರಾಹುಲ್‌ ಬಯಸಿದಲ್ಲಿ ನಾವು ಚರ್ಚೆಗೆ ಸಿದ್ದರಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷ ಚರ್ಚೆಗೆ ಸಿದ್ದವಿಲ್ಲ ಎಂದು ಲೇವಡಿ ಮಾಡಿದರು.
 
ಬಿಜೆಪಿ ನಾಯಕರ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಆರೋಪಗಳನ್ನು ತಳ್ಳಿಹಾಕಿದ ಪ್ರಸಾದ್, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಜನಪ್ರಿಯತೆಯಿಂದ ಕಾಂಗ್ರೆಸ್ ಕಂಗಾಲಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಲಲಿತ್‌ಗೇಟ್ ಮತ್ತು ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸರಕಾರ ಸದಾ ಸಿದ್ದವಿದೆ ಎಂದು ಹಲವಾರು ಬಾರಿ ಹೇಳಿಕೆ ನೀಡಿದ್ದರೂ ಕಾಂಗ್ರೆಸ್ ಪಕ್ಷ ತನ್ನ ಸಿದ್ಧಾಂತಕ್ಕೆ ಅಂಟಿಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಒಂದು ವೇಳೆ ಕಾಂಗ್ರೆಸ್ ಪಕ್ಷ ಜವಾಬ್ದಾರಿ ವಿಪಕ್ಷವಾಗಿ ಕಾರ್ಯನಿರ್ವಹಿಸಬೇಕು ಎಂದಾದಲ್ಲಿ ಸ್ವಾಗತ. ಬಡವನೊಬ್ಬನ ಮಗ ದೇಶ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾನೆ ಎನ್ನುವ ನೆಪವೊಡ್ಡಿ ಕಲಾಪಕ್ಕೆ ಅಡ್ಡಿಪಡಿಸಿದಲ್ಲಿ ಅದು ತಪ್ಪು ಎಂದರು. 

ವೆಬ್ದುನಿಯಾವನ್ನು ಓದಿ