ನವದೆಹಲಿ : ಎಸ್ಸಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಸಲಹೆ ನೀಡಿದೆ.
ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ಪೀಠ, ಹೈಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುವಂತೆ ಮೌಖಿಕ ಸೂಚನೆ ನೀಡಿದೆ.
ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, 2020ರಲ್ಲಿ ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯದಗಳನ್ನು ಎಸ್ಸಿ ಮೀಸಲಾತಿಯಿಂದ ತೆಗೆಯುವ ಬಗ್ಗೆ ಕ್ರಮ ವಹಿಸಲು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸೂಚಿಸಿತ್ತು.
ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಪ್ರಸ್ತಾವನೆ ಸಲ್ಲಿಸಲು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಸರ್ಕಾರಕ್ಕೆ ತಿಳಿಸಿ ಮೂರು ವರ್ಷಗಳಾಗಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ಪ್ರಸ್ತಾವನೆ ಸಲ್ಲಿಸಿಲ್ಲ. ಈ ನಿಟ್ಟಿನಲ್ಲಿ ಕೋರ್ಟ್ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.