ನವದೆಹಲಿ: ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ವಿವಾದವು ಆಂಧ್ರ ಪ್ರದೇಶವಷ್ಟೇ ಅಲ್ಲದೇ ದೇಶದಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಅಯೋಧ್ಯೆಯಲ್ಲಿ ಬಾಲ ರಾಮನ ವಿಗ್ರಹ ಪ್ರತಿಷ್ಠಾಪನೆ ವೇಳೆ ತಿರುಪತಿ ಲಾಡು ವಿತರಿಸಲಾಗಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಅವರು ತಿರುಪತಿ ಲಾಡು ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಇದು ದುರದೃಷ್ಟಕರ. ಇದರಿಂದ ತಿರುಪತಿ ದೇವಸ್ಥಾನದ ಪ್ರತಿಷ್ಠೆಯ ಮೇಲೂ ಪರಿಣಾಮ ಬೀಳುತ್ತದೆ ಎಂದರು.
ಅದಲ್ಲದೆ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ಬಾಲ ರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದಲ್ಲಿಯೂ ತಿರುಮಲ ತಿರುಪತಿ ದೇವಸ್ಥಾನಮ್ಸ್ ಸುಮಾರು ಮೂರು ಟನ್ ತೂಕದ ಲಾಡುಗಳನ್ನು ಕಳುಹಿಸಿತ್ತು.
ಪ್ರಧಾನಿ ನರೇಂದ್ರ ಮೋದಿ, ಚಿತ್ರರಂಗದ ಗಣ್ಯರು, ಉದ್ಯಮಿಗಳು ಸೇರಿದಂತೆ ಸುಮಾರು ಎಂಟು ಸಾವಿರ ಜನರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.