ಚುನಾವಣೆ : ಇಂದು ಮಮತಾ ಬ್ಯಾನರ್ಜಿ ಸಭೆ

ಬುಧವಾರ, 15 ಜೂನ್ 2022 (07:11 IST)
ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಬಿಜೆಪಿ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿ ಯಾರಾಗಬೇಕು ಎನ್ನುವ ಚರ್ಚೆಗಳು ಶುರುವಾಗಿವೆ.
 
ಈ ಬಗ್ಗೆ ಚರ್ಚೆ ನಡೆಸಲು ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸೋನಿಯಾ ಗಾಂಧಿ, ಶರದ್ ಪವಾರ್, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಸೀತಾರಾಂ ಯೆಚೂರಿ ಸೇರಿದಂತೆ ದೇಶದ 22 ಪ್ರಾದೇಶಿಕ ಪಕ್ಷಗಳಿಗೆ ಪತ್ರ ಬರೆದು ಇಂದಿನ ಸಭೆಯಲ್ಲಿ ಭಾಗಿಯಾಗಲು ಮಮತಾ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎನ್ಸಿಪಿ, ಎಸ್ಪಿ, ಆರ್ಜೆಡಿ, ಎನ್ಸಿ, ಎಎಪಿ, ಸಿಪಿಎಂ, ಸಿಪಿಐ, ಜೆಎಂಎಂ, ಶಿವಸೇನೆ, ಐಯುಎಂಎಲ್, ಪಿಡಿಪಿ, ಜೆಡಿಎಸ್, ಆರ್ಎಲ್ಡಿ ಸೇರಿದಂತೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ) ಜೊತೆಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸಭೆಯಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಮತಾ ಬ್ಯಾನರ್ಜಿ ಕರೆದಿರುವ ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಾಂಗ್ರೆಸ್ ಪ್ರತಿನಿಧಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಬದಲು ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಭಾಗಿ ಆಗುವ ಸಾಧ್ಯತೆಯಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ