ಅಬಕಾರಿ ಹಗರಣ ಪ್ರಕರಣ: ಕೇಜ್ರಿವಾಲ್‌, ಎಎಪಿ ವಿರುದ್ಧ ಜಾರಿ ನಿರ್ದೇಶನಾಲಯದಿಂದ ಚಾರ್ಚ್‌ಶೀಟ್‌ ಸಲ್ಲಿಕೆ

Sampriya

ಶುಕ್ರವಾರ, 17 ಮೇ 2024 (20:26 IST)
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ಸಲ್ಲಿಸಿದೆ.

ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ 200 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಶೀಘ್ರದಲ್ಲೇ ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.  ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠದ ಮುಂದೆ ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ. ರಾಜು, ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ ಎಂದು ಹೇಳಿದರು.

ಕೋರ್ಟ್‌ಗೆ 200 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 8 ಚಾರ್ಜ್‌ಶೀಟ್‌ಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಒಂದು ಮುಖ್ಯ ಮತ್ತು 7 ಪೂರಕ ಚಾರ್ಜ್‌ಶೀಟ್‌ ಗಳಾಗಿವೆ. ಈ ಆರೋಪ ಪಟ್ಟಿಯಲ್ಲಿ ಇಡಿ ಆಮ್ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ. ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ರಾಜಕೀಯ ಪಕ್ಷವೊಂದು ಆರೋಪಿ ಹೆಸರಿಸಲಾಗಿರುವುದು ಇದೇ ಮೊದಲು.

 ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮೇ 10 ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಅವರು ಜೂನ್ 2 ರಂದು ಶರಣಾಗಬೇಕು ಎಂದು ಷರತ್ತು ವಿಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ