ಮುಂಬೈ: ಮಹಾರಾಷ್ಟ್ರ ರಾಜ್ಯದಾದ್ಯಂತ ಮಹಾಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಈ ಮಧ್ಯೆ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಹಲವು ವಿಮಾನಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ನಡೆಸುವ ಮುನ್ನ ಒಂಬತ್ತು ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನು ಸೂರತ್‌ಗೆ ಮಾರ್ಗ ಬದಲಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗಿನ ಪ್ರದೇಶಗಳಿಗೆ ನೀರು ನುಗ್ಗಿದೆ.
ಮಂಗಳವಾರ ಮುಂಬೈ ಸುತ್ತಮುತ್ತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದರೊಂದಿಗೆ ರತ್ನಗಿರಿ ಜಿಲ್ಲೆ, ಸಿಂಧುದುರ್ಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿಪತ್ತು ನಿರ್ವಹಣೆಗೆ 1916 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೋಮವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 5.4 ಸೆಂ.ಮೀ. ಮಳೆಯಾಗಿದೆ. ಪೂರ್ವ ಭಾಗದಲ್ಲಿ 7.2 ಸೆಂ.ಮೀ., ಪಶ್ಚಿಮದಲ್ಲಿ 6.5 ಸೆಂ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.