ಮುಂಬೈ: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಹಾರಾಷ್ಟ್ರದ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆಸಿದೆ. ವೈದ್ಯೆಯ ಮೇಲೆ ಸತತ ಅತ್ಯಾಚಾರ ಮಾಡಿದ್ದ ಪೊಲೀಸ್ ಅಧಿಕಾರಿ ಜೈಲುಪಾಲಾಗಿದ್ದಾನೆ.
ಸತಾರದಲ್ಲಿ ನಡೆದಿದ್ದ ವೈದ್ಯೆಯ ಆತ್ಮಹತ್ಯೆ ಪ್ರಕರಣದ ಆರೋಪಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಶನಿವಾರ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಸತಾರ ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಮೃತದೇಹ ಫಾಲ್ಟನ್ ಪಟ್ಟಣದ ಹೋಟೆಲ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ಅಂಗೈಯಲ್ಲಿ ಡೆತ್‌ನೋಟ್ ಬರೆದು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬದ್ನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಸಾಫ್ಟ್‌ವೇರ್ ಎಂಜಿನಿಯರ್ ಬಂಕರ್ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದರು.
ಡೆತ್‌ನೋಟ್ ಆಧರಿಸಿ ಫಾಲ್ಟನ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಸಬ್ ಇನ್ಸ್‌ಪೆಕ್ಟರ್ ಬದ್ನೆ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.
ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮೃತ ವೈದ್ಯೆಯ ಸಂಬಂಧಿಕರು ಒತ್ತಾಯಿಸಿದ್ದಾರೆ.