ಜೆಎನ್‌ಯು ವಿದ್ಯಾರ್ಥಿ ನಾಯಕನನ್ನು ಬಿಡುಗಡೆಗೊಳಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ ಯಚೂರಿ

ಶನಿವಾರ, 13 ಫೆಬ್ರವರಿ 2016 (15:20 IST)
ಸಂಸತ್ ದಾಳಿ ರೂವಾರಿ ಉಗ್ರ ಅಫ್ಜಲ್ ಗುರು ಪರವಾಗಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿತರಾದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸಿಪಿಐ ನಾಯಕ ಸೀತಾರಾಮ್ ಯಚೂರಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.
 
ಸಂಸತ್ ದಾಳಿ ರೂವಾರಿ ಅಫ್ಜಲ್ ಗುರು ಗಲ್ಲಿಗೇರಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಲ್ಲದೇ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪಿದ ಮೇಲೆ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 
 
ಪ್ರಸ್ತುತ ನಡೆಯುತ್ತಿರುವ ಘಟನೆಗಳು ತುರ್ತುಪರಿಸ್ಥಿತಿಗಿಂತ ತುಂಬಾ ಕೆಟ್ಟದಾಗಿವೆ. 20 ವಿದ್ಯಾರ್ಥಿಗಳನ್ನು ಅನವಶ್ಯಕವಾಗಿ ಗುರಿಯಾಗಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ನಂತರ ಯಚೂರಿ ಮಾಧ್ಯಮದವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.
 
ಮುಗ್ದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದಿಲ್ಲ ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ. ಬಂಧಿಸಲಾದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾನನ್ನು ಬಿಡುಗಡೆಗೊಳಿಸುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
 
ಮತ್ತೊಂದು ಘಟನೆಯಲ್ಲಿ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಕೂಡಾ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ ಘಟನೆ ನಡೆದಿದೆ.

ವೆಬ್ದುನಿಯಾವನ್ನು ಓದಿ