ಬೆಂಗಳೂರು : ರೈತರ ಸಂಕಷ್ಟಕ್ಕೆ ಎಂದೂ ಸ್ಪಂದಿಸದ ಗುಜರಾತ್ ಮೂಲದ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಹೋರಾಟ ನಡೆಸಿದ್ದ ಮಹಾತ್ಮಾ ಗಾಂಧೀಜಿ ಅವರನ್ನು ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 10 ತಿಂಗಳುಗಳಿಂದ ರೈತರು ಗಾಂಧಿ ಆದರ್ಶವಾದ ಅಹಿಂಸೆ ಮೂಲಕ ಹೋರಾಟ ನಡೆಸುತ್ತಿದ್ದರೂ ಪ್ರಧಾನಿಯವರು ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.
75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ “ಗಾಂಧೀಜಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಮಾಡಲಾಗುತ್ತಿದೆ. ನಮ್ಮ ಎಲ್ಲ ನಾಯಕರು 6000 ಪಂಚಾಯತ್ಗಳಲ್ಲಿ ಒಂದೊಂದು ಸಭೆ ಹಾಗೂ ಪ್ರತಿಭಟನೆ ನಡೆಸಲಿದ್ದಾರೆ. ಇದರಲ್ಲಿ ಕಾಂಗ್ರೆಸ್ ಇತಿಹಾಸ ಹಾಗೂ ಹೋರಾಟದ ಹಾದಿಯನ್ನು ಮೆಲುಕು ಹಾಕಲಾಗುತ್ತದೆ ಎಂದು ಹೇಳಿದರು.