ನವದೆಹಲಿ: ದೇಶದಲ್ಲಿ ಭಾರೀ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪಂಚ ರಾಜ್ಯಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು.
ಏಪ್ರಿಲ್ 9 ರಿಂದ ವಿವಿಧ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಎಲ್ಲ ರಾಜ್ಯಗಳ ಮತ ಎಣಿಕೆ ಕಾರ್ಯವು ಮೇ 4 ರಂದು ಏಕಕಾಲದಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವೇಳೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಕೂಡ ಆಯೋಗ ಘೋಷಿಸಿದೆ.
ಅಸ್ಸಾಂ, ಕೇರಳ ಮತ್ತು ಪುದುಚೇರಿ: ಈ ಮೂರು ಕಡೆಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ.
ತಮಿಳುನಾಡು: ತಮಿಳುನಾಡಿನಲ್ಲಿಯೂ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಏಪ್ರಿಲ್ 23ರಂದು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಪಶ್ಚಿಮ ಬಂಗಾಳ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಪಶ್ಚಿಮ ಬಂಗಾಳದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 23 ರಂದು ನಡೆದರೆ, ಎರಡನೇ ಹಂತದ ಮತದಾನ ಏಪ್ರಿಲ್ 29 ರಂದು ನಡೆಯಲಿದೆ.
ಿನ್ನೂ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆಗೆ ದಕ್ಷಿಣ ಮತ್ತು ಬಾಗಲಕೋಟ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ.
ಪಂಚ ರಾಜ್ಯಗಳ ಜತೆಗೆ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಮೇ 4 ರಂದು ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.