ಮುಂಬೈ ಕಾಲ್ತುಳಿತ: ಮೃತರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸರಕಾರ
ಶುಕ್ರವಾರ, 29 ಸೆಪ್ಟಂಬರ್ 2017 (15:41 IST)
ಮುಂಬೈನ ಎಲ್ಫಿಲ್ಟನ್ ರೈಲ್ವೇ ಸೇತುವೆಯಲ್ಲಿ ಇಂದು ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 23 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಾದವರಿಗೆ ಮಹಾರಾಷ್ಟ್ರ ಸರಕಾರ 5 ಲಕ್ಷ ರೂ.ಪರಿಹಾರ ಘೋಷಿಸಿದೆ.
ಜೋರಾಗಿ ಮಳೆ ಸುರಿಯುತ್ತಿದ್ದರಿಂದ, ಮಳೆಯಿಂದ ರಕ್ಷಣೆ ಪಡೆಯಲು ಸೇತುವೆ ಬಳಿಗೆ ಓಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 10.45 ರ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವು ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೃತರಾದವರಿಗೆ ಸರಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಗಾಯಗೊಂಡವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ವಿನೋದ್ ತಾವ್ಡೆ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಪ್ರಕರಣ ಸಂಬಂಧವನ್ನು ಮಹಾರಾಷ್ಟ್ರ ಸರ್ಕಾರ ಹಾಗೂ ರೈಲ್ವೇ ಸಚಿವಾಲಯ ತನಿಖೆ ನಡೆಸಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿದ್ದಾರೆ. ಉನ್ನತ ಮಟ್ಟದ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಘಟನೆಯಲ್ಲಿ ಮೃತರಾವರಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಎಂದು ಸಚಿವ ವಿನೋದ್ ತಾವ್ಡೆ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.