ವ್ಯಾಪಂ ಹಗರಣದಿಂದ ಬಿಜೆಪಿ ಸರಕಾರಕ್ಕೆ ಬೆದರಿಕೆಯಿಲ್ಲ: ನಿರ್ಮಲಾ ಸೀತಾರಾಮನ್

ಮಂಗಳವಾರ, 21 ಜುಲೈ 2015 (16:05 IST)
ವ್ಯಾಪಂ ಹಗರಣ ಕುರಿತಂತೆ ಮುಂಗಾರು ಅಧಿವೇಶನವನ್ನು ವಿಪಕ್ಷಗಳು ಅಸ್ತವ್ಯಸ್ಥಗೊಳಿಸುವ ಬೆದರಿಕೆಯೊಡ್ಡಿದ್ದರೂ ಮಧ್ಯಪ್ರದೇಶದ ಸರಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
 
ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣ ಮಧ್ಯಪ್ರದೇಶ ಮತ್ತು ಕೇಂದ್ರ ಸರಕಾರಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಪಕ್ಷದ ನಾಯಕರು ಯಾವ ತಪ್ಪು ಮಾಡಿಲ್ಲವಾದ್ದರಿಂದ ವಿಪಕ್ಷಗಳ ಯಾವುದೇ ಬೆದರಿಕೆಗಳಿಗೆ ಮಣಿಯುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದರು. 
 
ವ್ಯಾಪಂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ ದೂರಿನ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದರು. 
 
ವ್ಯಾಪಂ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಸಿಬಿಐಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡುತ್ತಿದೆ. ತನಿಖೆ ಅಂತ್ಯಗೊಂಡ ನಂತರ ಸತ್ಯಾಂಶ ಬಹಿರಂಗವಾಗಲಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
 

ವೆಬ್ದುನಿಯಾವನ್ನು ಓದಿ