ಅ.7, 8ರಂದು ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಡಿಕೆಶಿ
ಭಾನುವಾರ, 3 ಅಕ್ಟೋಬರ್ 2021 (08:04 IST)
ಬೆಂಗಳೂರು : ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳು ಅ. 7ರಂದು ಹಾನಗಲ್ನಲ್ಲಿ ಹಾಗೂ ಅ.8ರಂದು ಸಿಂದಗಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ನಾವು ಸ್ಥಳೀಯ ನಾಯಕರ ಜತೆ ಚರ್ಚಿಸಿದ್ದೇವೆ. ನಮ್ಮ ನಾಯಕರು ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅದು ರಾಜಕೀಯ ತಂತ್ರಗಾರಿಕೆ. ಅದರ ಬಗ್ಗೆ ನಾವು ಚರ್ಚಿಸುವುದು ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ ಎಂದರು.
ಸಿದ್ದರಾಮಯ್ಯ ಮಾತನಾಡಿ, ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವು ಗೆಲ್ಲುತ್ತೇವೆ. ಸಿಂದಗಿ ಅಭ್ಯರ್ಥಿ ಘೋಷಣೆ ಆಗಿದೆ. ಹಾನಗಲ್ನಲ್ಲಿ ಶ್ರೀನಿವಾಸ ಮಾನೆ ಹಾಗೂ ಮನೋಹರ್ ತಹಸೀಲ್ದಾರ್ ನಡುವೆ ಪೈಪೋಟಿ ಇದೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ತಿಳಿಸಿದರು.