ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಾರೆಂದು ಇಂದು ಬಹಿರಂಗ
ಬುಧವಾರ, 14 ಜೂನ್ 2017 (10:58 IST)
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಮುಖ ವಿಪಕ್ಷಗಳು ಇಂದು ಸಭೆ ಸೇರುತ್ತಿದ್ದು, ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ.
ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದ್ದು, ಸಿಪಿಐಎಂ, ಜೆಡಿಯು, ಡಿಎಂಕೆ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷಗಳು ತಮ್ಮ ಆಯ್ಕೆಯ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.
ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, 20 ರಂದು ಮತ ಎಣಿಕೆ ನಡೆಯಲಿದೆ. ಜೂನ್ 14 ರಿಂದ ಜೂನ್ 28 ರೊಳಗಾಗಿ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಈ ನಡುವೆ ಆಡಳಿತಾರೂಢ ಬಿಜೆಪಿ ಕೂಡಾ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ವೆಂಕಯ್ಯ ನಾಯ್ಡು ಅವರನ್ನೊಳಗೊಂಡ ಸಮಿತಿ ರೂಪಿಸಿದೆ. ಸದ್ಯದಲ್ಲೇ ಬಿಜೆಪಿ ಕೂಡಾ ತಮ್ಮ ಅಭ್ಯರ್ಥಿಯ ಘೋಷಣೆ ಮಾಡಲಿದೆ.