ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಏಪ್ರಿಲ್ 29 ರೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಆಯೋಗ ಸೂಚಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ನೋಟಿಸ್ ಕಳುಹಿಸಲಾಗಿದೆ. ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿರುವ ಅಂಶಗಳಿಗೆ ಸಂಬಂಧಿಸಿದಂತೆ ಬಂದ ದೂರಿನಂತೆ ಈ ನೋಟಿಸ್ ನೀಡಲಾಗಿದೆ.
ಇಬ್ಬರೂ ನಾಯಕರು ತಮ್ಮ ಭಾಷಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತಹ, ಪ್ರಚೋದನಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಈ ರೀತಿಯ ಮಾತುಗಳ ಜವಾಬ್ಧಾರಿ ಆಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಸೇರಿದ್ದಾಗಿದೆ.
ಇತ್ತೀಚೆಗೆ ರಾಜಸ್ಥಾನದಲ್ಲಿ ಮಾತನಾಡಿದ್ದ ಮೋದಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಅಧಿಕ ಮಕ್ಕಳಿರುವವರಿಗೆ ಹಂಚಲಿದೆ ಎಂದಿದ್ದರು. ಆ ಮೂಲಕ ಮುಸ್ಲಿಂ ಸಮುದಾಯವನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದರು. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು.