ಕೋಲ್ಕತ್ತಾ: ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಿಸುವ ಮೂಲಕ ಸಿಬಿಐ ಸಂದೀಪ್ ಘೋಷ್ ವಿರುದ್ಧ ಭ್ರಷ್ಟಾಚಾರದ ತನಿಖೆ ಆರಂಭಿಸಿದೆ. ಕೋಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಎಸ್‌ಐಟಿ ಶನಿವಾರ ಬೆಳಗ್ಗೆ ನಿಜಾಮ್ ಪ್ಯಾಲೇಸ್‌ನಲ್ಲಿರುವ ಸಿಬಿಐ ಕಚೇರಿಗೆ ತೆರಳಿ ಎಲ್ಲಾ ದಾಖಲೆಗಳನ್ನು ಹಸ್ತಾಂತರಿಸಿದೆ ಎಂದು ಸಿಬಿಐ ಆಪ್ತ ಮೂಲಗಳು ಬಹಿರಂಗಪಡಿಸಿವೆ.
ದಾಖಲೆಗಳನ್ನು ಸ್ವೀಕರಿಸಿದ ನಂತರ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಬಿಐ ಈಗಾಗಲೇ ಇಂದಿನ ಎಫ್‌ಐಆರ್ ಪ್ರತಿಯನ್ನು ಅಲಿಪುರ ಸಿಜೆಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಣಕಾಸು ಅವ್ಯವಹಾರದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ
ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಅವಧಿಯಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರ ಪ್ರಕರಣವನ್ನು ಸಿಬಿಐ ಶನಿವಾರ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆಯನ್ನು ಏಜೆನ್ಸಿಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಸಿಬಿಐ ಶನಿವಾರ ಎಸ್‌ಐಟಿಯಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದೆ ಮತ್ತು ಎಫ್‌ಐಆರ್ ಅನ್ನು ಮರು ನೋಂದಾಯಿಸಲು ಮುಂದಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಘೋಷ್ ಅವರ ಅಧಿಕಾರಾವಧಿಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಆಪಾದಿತ ಹಣಕಾಸು ಅವ್ಯವಹಾರದ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುವಂತೆ ಕೋರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಸಲ್ಲಿಸಿದ ಅರ್ಜಿಯ ಮೇರೆಗೆ ಹೈಕೋರ್ಟ್ ನಿರ್ದೇಶನಗಳನ್ನು ನೀಡಿದೆ.
ಆಗಸ್ಟ್ 9 ರಂದು ಕ್ಯಾಂಪಸ್‌ನಲ್ಲಿ ವೈದ್ಯೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.