ಡೆಹ್ರಾಡೂನ್: ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ಒಂದೇ ಕುಟುಂಬದ 7 ಮಂದಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾಲದ ಸುಳಿಗೆ ಸಿಲುಕಿ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.
ಕುಟುಂಬ ಸದಸ್ಯರು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಸಾಮೂಹಿಕವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗಿದ ನಂತರ ಕಳೆದ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.
ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.
ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಸಾಲಬಾಧೆಯಿಂದ ಸಾವಿಗೆ ಶರಣಾಗಿರುವುದಾಗಿ ಉಲ್ಲೇಖಿಸಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.