ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ 27ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸೇರಿದ್ದಾರೆ.
ಕಳೆದ 30 ವರ್ಷಗಳಲ್ಲಿ ಇದು ಭೀಕರ ದಾಳಿ ಎನ್ನಲಾಗಿದ್ದು, ಉಗ್ರರ ಗುಂಡಿನ ದಾಳಿಗೆ ಬಲಿಯಾದ ಪ್ರವಾಸಿಗರ ಸಂಖ್ಯೆ 27ಕ್ಕೂ ಹೆಚ್ಚಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಆರ್ಪಿಎಫ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.
ಮೋದಿ ಎಚ್ಚರಿಕೆ
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಅವರನ್ನು ಬಿಡುವುದಿಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಇನ್ನಷ್ಟು ಬಲಗೊಳ್ಳಲಿದೆ ಎಂದಿದ್ದಾರೆ.
ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದಾರೆ.
ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯಾ ಪ್ರಾರಂಭಿಸಿವೆ.