ಉ.ಪ್ರದೇಶ ಚುನಾವಣೆ: ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ?

ಗುರುವಾರ, 3 ಮಾರ್ಚ್ 2016 (14:22 IST)
ಮುಂಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸೂಕ್ತ ಎಂದು ಚುನಾವಣೆ ರಣತಂತ್ರಜ್ಞ ಪ್ರಶಾಂತ್ ಕಿಶೋರ್, ಹೈಕಮಾಂಡ್‌ಗೆ ಕೋರಿದ್ದಾರೆ. ಆದರೆ, ಹೈಕಮಾಂಡ್ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. 
 
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಸಹೋದರಿ ಪ್ರಿಯಾಂಕಾ ವಾದ್ರಾಗೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಪ್ರಿಯಾಂಕಾ ಸಿಎಂ ಅಭ್ಯರ್ಥಿಯಾಗುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.
 
ಉತ್ತರಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರು, ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಜಯಗಳಿಸಲು ನೆರವಾಗವಂತಹ ಕೆಲ ಆಲೋಚನೆಗಳನ್ನು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ ಸುಮಾರು 30 ನಾಯಕರು ಸಭೆಯಲ್ಲಿ ಪಾಲ್ಗೊಂಡು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಂಗಡವಾಗಿ ಅಭ್ಯರ್ಥಿಗಳ ಘೋಷಣೆ, ಹಿರಿಯ ನಾಯಕರು ಮತ್ತು ಮಾಜಿ ಸಚಿವರು ಚುನಾವಣೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ಜಯಗಳಿಸಿದ ಹಿಂದಿನ ರೂವಾರಿಯಾಗಿದ್ದ ಚುನಾವಣಾ ರಣತಂತ್ರಜ್ಞ ಪ್ರಶಾಂತ್ ಕಿಶೋರ್ ಇದೀಗ ಕಾಂಗ್ರೆಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ