ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ನಿತ್ಯ ಆರು ಅತ್ಯಾಚಾರ, ಏಳು ಕಿರುಕುಳ ಪ್ರಕರಣಗಳು ದಾಖಲಾಗುತ್ತಿವೆ.
ಪ್ರಸುತ್ತ ವರ್ಷದಲ್ಲಿ ಶೇಕಡಾ 6 ರಷ್ಟು ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಮೊದಲ ಆರು ತಿಂಗಳಲ್ಲಿ 1,100ಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ನೋಂದಣಿ, ಮಹಿಳಾ ಸ್ನೇಹಿ ಸಹಾಯವಾಣಿಗಳು ಮತ್ತು ಸ್ಥಳೀಯ ಪೊಲೀಸ್ ಬೂತ್ಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಪೊಲೀಸರು ವರದಿ ನೀಡಿದ್ದಾರೆ.
ಅಂಕಿ ಅಂಶಗಳ ಪ್ರಕಾರ, ಈ ವರ್ಷ ಅತ್ಯಾಚಾರ ಪ್ರಕರಣಗಳಲ್ಲಿ ಶೇಕಡಾ 6 ರಷ್ಟು ಹೆಚ್ಚಳವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಗಳಲ್ಲಿ ಶೇಕಡಾ 17 ರಷ್ಟು ಏರಿಕೆಯಾಗಿದೆ. ಜನವರಿಯಿಂದ ಜುಲೈ 15 ರವರೆಗೆ 1,480 ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,244 ಪ್ರಕರಣಗಳು ದಾಖಲಾಗಿದ್ದವು.
ಈ ವರ್ಷ ಮಹಿಳೆಯರ ಅಪಹರಣ ಪ್ರಕರಣಗಳಲ್ಲೂ ಗಣನೀಯ ಏರಿಕೆಯಾಗಿದೆ. ಜನವರಿ ಮತ್ತು ಜುಲೈ 15ರ ನಡುವೆ 2,197 ಅಪಹರಣ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ 20 ಶೇಕಡಾ ಹೆಚ್ಚಳವಾಗಿದೆ.