ಉಚಿತ ವಿದ್ಯುತ್ ಅನುಷ್ಠಾನಕ್ಕೆ ಹೊಸ ಆ್ಯಪ್

ಬುಧವಾರ, 7 ಸೆಪ್ಟಂಬರ್ 2022 (08:42 IST)
ಬೆಂಗಳೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯುನಿಟ್ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್ ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಪಿಎಲ್ ಕುಟುಂಬದ ಎಸ್ಸಿ-ಎಸ್ಟಿ ಗ್ರಾಹಕರಿಗೆ 75 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು.

ಈ ಯೋಜನೆಯ ಪ್ರಯೋಜನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಸುಲಭ ಮತ್ತು ಸುಲಲಿತವಾಗಿ ಅನುಷ್ಠಾನಗೊಳಿಸಲು ಇ-ಆಡಳಿತ ಇಲಾಖೆಯು ಹೊಸ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸುತ್ತಿದೆ.

ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ