ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಅಕ್ಟೋಬರ್ 1ರ ವರೆಗೆ ಭಾರೀ ಮಳೆ

ಮಂಗಳವಾರ, 28 ಸೆಪ್ಟಂಬರ್ 2021 (07:59 IST)
ಬೆಂಗಳೂರು(ಸೆ.28) : ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ  2 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಈ ಬಾರಿ ಮುಂಗಾರು ಅಂತ್ಯ ನಿಧಾನವಾಗಲಿದ್ದು,  ಸೆಪ್ಟೆಂಬರ್ ತಿಂಗಳ ನಂತರವೂ ದೇಶದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರು ಜೈಸಲ್ಮೇರ್ ಮೂಲಕ ಕೋಟ ಹಾಗೂ  ಪೂರ್ವ ಮಧ್ಯ ಬಂಗಾಳಕೊಲ್ಲಿಯವರೆಗೆ ಹಾದು ಹೋಗುತ್ತಿದೆ.
ಸೈಕ್ಲೋನಿಕ್ ಪರಿಚಲನೆಯು ಪೂರ್ವ ಮಧ್ಯ ಮತ್ತು ಪಕ್ಕದ ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ  ಹಾಗೂ ಮ್ಯಾನ್ಮಾರ್ ಕರಾವಳಿಯಲ್ಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 30ರ ನಂತರ ದೇಶದಲ್ಲಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ, ಆದರೆ, ಅಕ್ಟೋಬರ್ ತಿಂಗಳ ಮಧ್ಯ ಭಾಗದವರೆಗೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಭಾವದಿಂದಾಗಿ ಮುಂಗಾರು ಅಂತ್ಯ ಈ ಬಾರಿ ವಿಳಂಬವಾಗಲಿದೆ. ಸೆಪ್ಟೆಂಬರ್ ವೇಳೆಗೆ ಮುಂಗಾರು ಅಂತ್ಯವಾಗಲು ಸದ್ಯ ದೇಶದಲ್ಲಿ ಹವಾಮಾನ ವ್ಯವಸ್ಥೆ ಸರಿಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ