ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ!

ಬುಧವಾರ, 22 ಡಿಸೆಂಬರ್ 2021 (06:16 IST)
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಒಟ್ಟು 10 ಲಕ್ಷಕ್ಕೂ ಹೆಚ್ಚಿನ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಒಣಭೂಮಿ ಬೇಸಾಯದ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 6800 ರೂ. ಪರಿಹಾರ ನಿಗದಿಪಡಿಸಲಾಗಿದೆ.

ಇದಕ್ಕೆ ರಾಜ್ಯ ಸರ್ಕಾರವು ಇನ್ನೂ 6,800 ರೂ. ಸೇರಿಸಿ, 13600 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಅಂತೆಯೇ ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ 13,500 ರೂ. ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ 11,500 ರೂ. ನೀಡಲು ನಿರ್ಧರಿಸಿದ್ದು,

ಇದರಿಂದ ರೈತರಿಗೆ ಹೆಕ್ಟೇರ್ಗೆ 25,000 ರೂ. ದೊರೆಯಲಿದೆ. ತೋಟಗಾರಿಕಾ ಬೆಳೆಗಳಿಗೆ ಹೆಕ್ಟೇರ್ಗೆ 18,000 ರೂ. ಪರಿಹಾರ ನಿಗದಿ ಪಡಿಸಿದ್ದು, ರಾಜ್ಯದ ಬೊಕ್ಕಸದಿಂದ ಇದಕ್ಕೆ 10,000 ರೂ. ಸೇರಿಸಿ, ಒಟ್ಟು 28,000 ರೂ. ಪರಿಹಾರ ನೀಡಲಾಗುವುದು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 1200 ಕೋಟಿ ರೂ. ಹೊರೆ ಉಂಟಾಗಲಿದೆ ಎಂದು ಅವರು ಸದನದಲ್ಲಿ ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ