ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸೋಂಕಿತರಿಗೆ ಸರ್ಕಾರದ ಪರಿಹಾರ ಇಲ್ಲ!
ಗುರುವಾರ, 20 ಜನವರಿ 2022 (14:07 IST)
ತುಮಕೂರು : ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಗೆ ಸೇರದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು, ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಬಳಿಕ ಖಾಸಗಿ ಆಸ್ಪತ್ರೆಗೆ ರೆಫರ್ ಆಗಿರಬೇಕು.
ಇವೆರಡೂ ಆಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದರ ಬಿಲ್ ಅನ್ನು ಸರ್ಕಾರಕ್ಕೆ ಕಳುಹಿಸಿದರೆ ಪರಿಹಾರ ನೀಡಲಾಗುವುದಿಲ್ಲ ಹಾಗೂ ಮರಣಾನಂತರ ಸಿಗುವ ಸೌಲಭ್ಯಗಳನ್ನು ಕೂಡ ನೀಡಲಾಗುವುದಿಲ್ಲ ಎಂದರು.