ತಮಿಳುನಾಡಿಗೆ ನೀರು ಬಿಡಲ್ಲ, ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಗುರುವಾರ, 14 ಸೆಪ್ಟಂಬರ್ 2023 (11:44 IST)
ಬೆಂಗಳೂರು : ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿರುವುದು ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ.
ಈ ಹಿನ್ನೆಲೆಯಲ್ಲಿ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ನೀರು ಹರಿಸುವುದು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆಆರ್ಎಸ್ ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿಗೆ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ.
ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ.