ಭಾರೀ ಮಳೆಯಿಂದ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಮಂಗಳವಾರ, 16 ನವೆಂಬರ್ 2021 (08:56 IST)
ಕರ್ನಾಟಕದ ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗಲಿದೆ.
ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಿದೆ. ಹಾಗೇ, ಕಳೆದ ವಾರದಿಂದ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ರಾಜ್ಯದಲ್ಲಿ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 15ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.