ಬೆಂಗಳೂರು : ಹಿಜಾಬ್ ಕುರಿತ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿರುವ ಹಿನ್ನೆಲೆ.
ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಮಾ.15ರಿಂದ 21ರವರೆಗೆ ಬೆಂಗಳೂರು ನಗರಾದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಆದೇಶ ಹೊರಡಿಸಿದ್ದಾರೆ.
ಮಾ.15ರ ಬೆಳಗ್ಗೆ 6ರಿಂದ ಮಾ.21ರ ತಡರಾತ್ರಿ 12 ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವೇಳೆ ಯಾವುದೇ ಪ್ರತಿಭಟನೆ, ಮೆರವಣಿಗೆ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಸೇರುವಂತಿಲ್ಲ.
ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು, ಸಾಗಾಟ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೆ ಕಟ್ಟೆಚ್ಚರ ವಹಿಸಬೇಕು ಎಂದು ನಗರದ ಎಂಟು ವಲಯಗಳ ಡಿಸಿಪಿಗಳಿಗೂ ಸೂಚಿಸಲಾಗಿದೆ.
ಅಗತ್ಯಕ್ಕನುಗುಣವಾಗಿ ಹೆಚ್ಚುವರಿ ಕೆಎಸ್ಆರ್ಪಿ ತುಕಡಿಗಳು ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.