ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅ. 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್
ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಯೆಲ್ಲೋ ಅಲರ್ಟ್ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.